ಆವ ಕರ್ಮವೊ ಇದು ಆವ ಧರ್ಮವೊ
ಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ
ಸತ್ತವನು ಎತ್ತ ಪೋದ
ಸತ್ತು ತನ್ನ ಜನ್ಮಕೆ ಪೋದ
ಸತ್ತವನು ಉಣ್ಣುವನೆಂದು
ನಿತ್ಯ ಪಿ೦ಡವಿಕ್ಕುತೀರಿ
ಎಳ್ಳು ದರ್ಭೆ ಕೈಲಿ ಪಿಡಿದು
ಪಿತರ ತೃಪ್ತಿ ಪಡಿಸುತೀರಿ
ಎಳ್ಳು ಮೀನು ನುಂಗಿ ಹೋಯಿತು
ದರ್ಭೆ ನೀರೊಳು ಹರಿದು ಹೋಯಿತು
ಎಡಕೆ ಒಂದು ಬಲಕೆ ಒಂದು
ಎಡಕೆ ತೋರಿಸಿ ಬಲಕೆ ತೋರಿಸಿ
ಕಡು ಧಾವಂತ ಪಡಿಸಿ
ಕಟಿಯ ಹಸ್ತದೊಳಗೆ ಪಿಡಿಸುತೀರಿ
ಮಂತ್ರಾಕ್ಷತೆಯ ಕೈಗೆ ಕೊಟ್ಟು
ಮೋಕ್ಷವನ್ನು ಹಾರೈಸುವಿರಿ
ಮಂತ್ರವೆಲ್ಲೊ ಅಕ್ಷತೆಯೆಲ್ಲೊ
ಮೋಕ್ಷವೆಲ್ಲೊ ಮರ್ತ್ಯವೆಲ್ಲೊ
ಹೇಳುವವನು ಅವಿವೇಕಿ
ಕೇಳುವವನು ಅಜ್ಞಾನಿ
ಹೇಳುವ ಕೇಳುವ ಇಬ್ಬರ ಸೊಲ್ಲ
ಆದಿಕೇಶವಮೂರ್ತಿ ಬಲ್ಲ
Music
Courtesy: